ಸುದ್ದಿಲೈವ್/ಶಿವಮೊಗ್ಗ
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ 73 ವರ್ಷದ ವೃದ್ಧನ ವಿರುದ್ಧ ಆರೋಪ ಸಾಬೀತಾದ ಬೆನ್ನಲ್ಲೇ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 2.5 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
2023ನೇ ಸಾಲಿನಲ್ಲಿ ಶಿವಮೊಗ್ಗ ತಾಲ್ಲೂಕಿನ 73 ವರ್ಷದ ವ್ಯಕ್ತಿಯು 10 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಹೊಖೆಹೊನ್ನೂರು ಪೊಲೀಸ್ ಠಾಣೆಯ ಪಿಐ ಲಕ್ಷ್ಮಿಪತಿ ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.
ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಶ್ರೀಧರ್ ಹೆಚ್. ಆರ್, ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದರು. ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-1 ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆಸಲಾಗಿತ್ತು. ಆರೋಪಿಯ ವಿರುದ್ಧ ಆರೋಪ ದೃಡ ಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಮೋಹನ್ ಜೆ. ಎಸ್ ರವರು ದಿನಾಂಕಃ 08-08-2024 ರಂದು ಪ್ರಕರಣದ ಆರೋಪಿ ಶಿವಮೊಗ್ಗ ತಾಲ್ಲೂಕಿನ 73 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ಮತ್ತು ರೂ 2,50,000/- ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ದಂಡ ಕಟ್ಟಲು ವಿಫಲನಾದಲ್ಲಿ 01 ವರ್ಷ ಸಾಧಾ ಕಾರಾವಾಸ ಶಿಕ್ಷೆ* ವಿಧಿಸಿದ್ದು, ದಂಡದ ಮೊತ್ತದಲ್ಲಿ 2 ಲಕ್ಷ ಮತ್ತು ಸರ್ಕಾರದಿಂದ 6 ಲಕ್ಷರೂಗಳನ್ನು ನೊಂದ ಬಾಲಕಿಗೆ ಪರಿಹಾರ ರೂಪದಲ್ಲಿ ನೀಡಲು ಆದೇಶಿಸಿರುತ್ತಾರೆ.